Home Crime ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ  ಮನವಿ…!!

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ  ಮನವಿ…!!

ಉಡುಪಿ: ಜಿಲ್ಲೆಯ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ (27) ಆತ್ಮಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದೆ.

ಘಟನೆ ಹಿನ್ನೆಲೆ:
ಹಿಂದೂ ಜಾಗರಣ ವೇದಿಕೆಯ ನಾಯರ್ ಕೊಡಿ ಘಟಕದ ಕಾರ್ಯಕರ್ತ ಪ್ರದೀಪ್ ಪೂಜಾರಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಹಲ್ಲೆಗೊಳಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅ.30 ರಂದು ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರದೀಪ್ ವಿರುದ್ಧ ಈ ಹಿಂದೆ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅ.27 ರಂದು ರಾತ್ರಿ ಮನೆಗೆ ಹೋಗುತ್ತಿದ್ದಾಗ ಯುವತಿಯ ಮನೆಯವರು ಬಲವಂತವಾಗಿ ಕರೆದೊಯ್ದು ಬೆತ್ತ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಈ ಹಲ್ಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ ಹಲವರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಲ್ಲವ ಯುವ ವೇದಿಕೆ ಆಗ್ರಹ:

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ನೇತೃತ್ವದಲ್ಲಿ ನಿಯೋಗವು ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಸಭೆ ನಡೆಸಿ, ನಂತರ ಎಸ್ಪಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಪ್ರಕರಣದಲ್ಲಿ ನಿಷ್ಪಕ್ಷಪಾತ, ಸಮಗ್ರ ತನಿಖೆ ನಡೆಸಬೇಕು ಆರೋಪಿಗಳನ್ನು ಮತ್ತು ಪರೋಕ್ಷವಾಗಿ ಸಹಕರಿಸಿದವರನ್ನು ಶೀಘ್ರ ಬಂಧಿಸಬೇಕು.

ತನಿಖೆಗೆ ವಿಶೇಷ ಪೊಲೀಸ್ ತಂಡ ರಚಿಸಬೇಕು.
ಸಂತ್ರಸ್ತರ ದೂರು ಸ್ವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕರ್ತವ್ಯ ಲೋಪದ ತನಿಖೆ ನಡೆಸಬೇಕು.

ತನಿಖೆಯಲ್ಲಿ ನಿರ್ಲಕ್ಷ್ಯ ಮುಂದುವರಿದರೆ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯೂ ಪೊಲೀಸ್ ಕರ್ತವ್ಯ ಲೋಪವನ್ನು ತೀವ್ರವಾಗಿ ಖಂಡಿಸಿದೆ.

ಇದೇ ವೇಳೆ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಸೂಕ್ತ ಕ್ರಮದ ಭರವಸೆ ಸಿಕ್ಕಿದೆ ಎಂದು ವೇದಿಕೆ ತಿಳಿಸಿದೆ.