Home Crime ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಈ ಮಾಹಿತಿ ನೀಡಿದ್ದು, ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದೆ. ಔಪಚಾರಿಕ ಬಂಧನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ:
ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರನ್ನು ಅ.27ರ ರಾತ್ರಿ ಶ್ರಾವ್ಯಾ ಶೆಟ್ಟಿ ಕುಟುಂಬದವರು ಮೂರು ಕಾರುಗಳಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಸಹೋದರ ದಿಲೀಪ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದರು. ಅ.28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಪ್ರದೀಪ್, ಅ.30ರ ಸಂಜೆ 5:30ಕ್ಕೆ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಂಬಂಧ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಎಸ್‌ಪಿ ಅವರು 5 ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಆದೇಶಿಸಿದ್ದರು. ಹಲ್ಲೆ ದೂರು ಬಂದಾಗ ಎಫ್‌ಐಆರ್ ಬದಲು ಎನ್‌ಸಿ ದಾಖಲಿಸಿದ ಹಿರಿಯಡ್ಕ ಠಾಣೆ ಎಸ್‌ಐ ವಿರುದ್ಧ ಕ್ರಮ ಕೈಗೊಂಡು ಕರ್ತವ್ಯದಿಂದ ತೆಗೆದು ಇಲಾಖಾ ತನಿಖೆಗೆ ಆದೇಶಿಸಿದ್ದರು.

ಇತ್ತ, ಪ್ರದೀಪ್ ವಿರುದ್ಧವೂ ಯುವತಿ 3 ಬಾರಿ ದೂರು ನೀಡಿದ್ದರು – 2025 ನ.10ರಂದು ಬೆದರಿಕೆ, ನ.29ರಂದು ಅತ್ಯಾಚಾರ, ಮತ್ತು ಅ.28ರಂದು ಖಾರದ ಪುಡಿ ಎರಚಿ ಕೊಲೆಯತ್ನ ಆರೋಪ. ಈ ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.