ಉಡುಪಿ : ಪೆರ್ಡೂರು ಪ್ರದೀಪ್ ಪೂಜಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ಸ್ವಾಗತಿಸಿದ್ದಾರೆ.
ನ್ಯಾಯಕ್ಕಾಗಿ ನಡೆಸಿದ ಹೋರಾಟಕ್ಕೆ ಸ್ಪಂದಿಸಿ ಈ ನಿರ್ಧಾರ ಕೈಗೊಂಡ ಸರ್ಕಾರಕ್ಕೆ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಹೋರಾಟಕ್ಕೆ ಬೆಂಬಲ ನೀಡಿದ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಮಾಜದ ನಾಯಕರು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರು, ಸಿಐಡಿ ತನಿಖೆಗೆ ವಹಿಸಿರುವುದರಿಂದ ಹೋರಾಟ ಅಂತ್ಯಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರದೀಪ್ ಪೂಜಾರಿ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪ ಎದುರಿಸುತ್ತಿರುವ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಪುನೀತ್ ಅವರನ್ನು ಅಮಾನತುಗೊಳಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಪ್ರದೀಪ್ ಪೂಜಾರಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸತ್ಯಾಸತ್ಯತೆ, ಅದರ ಹಿಂದಿನ ವಿಚಾರಗಳು ಹಾಗೂ ಅವರನ್ನು ಮಾನಸಿಕವಾಗಿ ಕುಗ್ಗಿಸಿ ಆತ್ಮಹತ್ಯೆಗೆ ಪ್ರೇರೇಪಿಸಲಾಗಿದೆ ಎಂಬ ಆರೋಪಗಳ ಬಗ್ಗೆಯೂ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯಾಗಬೇಕು. ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನುಬದ್ಧ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಿಐಡಿ ತನಿಖೆಯು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ನಡೆಯಬೇಕು. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಸತ್ಯಾಂಶವನ್ನು ಬಹಿರಂಗಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನ್ಯಾಯ ದೊರೆಯುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಪ್ರವೀಣ್ ಎಂ. ಪೂಜಾರಿ ತಿಳಿಸಿದ್ದಾರೆ.



