ಪಡುಬಿದ್ರಿ: ಉಡುಪಿ ಜಿಲ್ಲೆಯ ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದು, ಸುಮಾರು 300 ಬಾಕ್ಸ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.
ಗೋವಾದಿಂದ ಮಂಗಳೂರಿಗೆ ಮಹೀಂದ್ರ ಪಿಕಪ್ ಹಾಗೂ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ, ಬ್ಲೂ ಓಷಿಯನ್ ವಿಸ್ಕಿ ಬ್ರ್ಯಾಂಡ್‌ನ ಸುಮಾರು 300 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಮದ್ಯ ಸಾಗಾಟಕ್ಕೆ ಬಳಸಿದ್ದ ಮಹೀಂದ್ರ ಪಿಕಪ್ ವಾಹನ ಹಾಗೂ ಸ್ವಿಫ್ಟ್ ಡಿಸೈರ್ ಕಾರನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.










