ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಹಣೆ ಎಂಬಲ್ಲಿ ನಡೆದಿದೆ.
ಮೃತನನ್ನು ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಎಂದು ತಿಳಿಯಲಾಗಿದೆ.
ನ.14ರಂದು ರಾತ್ರಿ ಸುಮಾರು 9 ಗಂಟೆಗೆ ಸುಚಿನ್ ಬೈಕ್ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದ ವೇಳೆ ಕಲ್ಹಣೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಸುಚಿನ್ ಚಿಕಿತ್ಸೆ ಫಲಕಾರಿಯಾಗದೆ ನ.15ರಂದು ಬೆಳಿಗ್ಗೆ ಮೃತಪಟ್ಟಿದ್ದಾನೆ.
ಮೃತ ಸುಚಿನ್ ಡೊಮಿನಿಕ್ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ. ಅಪ್ರಾಪ್ತ ವಯಸ್ಸಿನಲ್ಲೇ ಬೈಕ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ಅಪಘಾತ ವಿದ್ಯಾರ್ಥಿಯ ಜೀವವನ್ನೇ ಬಲಿ ಪಡೆದಿದೆ.
ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ವಾಹನಗಳ ಸುರಕ್ಷತೆ ಹಾಗೂ ಅಪ್ರಾಪ್ತರು ವಾಹನ ಚಲಾಯಿಸುವ ಅಪಾಯದ ಕುರಿತು ಈ ಘಟನೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



