ಮಂಗಳೂರು: ಶಿಕ್ಷಣ ಸಂಸ್ಥೆಯ ಆವರಣದಲ್ಲೇ ವಿದ್ಯಾರ್ಥಿನಿಯೊಬ್ಬಳನ್ನು ಹಲವು ಮಂದಿ ಬಲವಂತವಾಗಿ ಎಳೆದೊಯ್ದ ಘಟನೆ ಮಂಗಳೂರಿನಲ್ಲಿ ಆತಂಕ ಮೂಡಿಸಿದೆ. ನಗರದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿ ನಡೆದಿರುವ ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.
ಲಭ್ಯವಾಗಿರುವ ವಿಡಿಯೋದಲ್ಲಿ ಕೆಲವರು ಕಾಲೇಜು ಆವರಣಕ್ಕೆ ಬಂದು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಥಾರ್ ವಾಹನಕ್ಕೆ ಹತ್ತಿಸುವ ದೃಶ್ಯಗಳು ಕಂಡುಬಂದಿವೆ. ಬಳಿಕ ವಾಹನ ಸ್ಥಳದಿಂದ ತೆರಳಿರುವುದೂ ವಿಡಿಯೋದಲ್ಲಿ ಸೆರೆಯಾಗಿದೆ.
ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಯುವತಿ ಮುಸ್ಲಿಂ ಸಮುದಾಯಕ್ಕೆ ಸೇರಿದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು, ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯ ಕುಟುಂಬದವರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಘಟನೆಯ ಹಿಂದಿನ ನಿಖರ ಕಾರಣ ಮತ್ತು ಸಂಬಂಧಪಟ್ಟವರ ಪಾತ್ರದ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಯುವತಿಯನ್ನು ಆಕೆಯ ಕುಟುಂಬದವರೇ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪವಿದೆ ಎಂದು ತಿಳಿಸಿದ್ದಾರೆ. ವಯಸ್ಕ ವ್ಯಕ್ತಿಯೊಬ್ಬರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಬಲವಂತದಿಂದ ಕರೆದೊಯ್ಯುವುದು ಕಾನೂನಿನ ಪ್ರಕಾರ ಅಪರಾಧವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಯುವತಿ ಪ್ರಾಪ್ತವಯಸ್ಕಳಾಗಿರುವುದರಿಂದ ತನ್ನ ಜೀವನದ ನಿರ್ಧಾರಗಳನ್ನು ಸ್ವತಂತ್ರವಾಗಿ ತೆಗೆದುಕೊಳ್ಳುವ ಹಕ್ಕು ಹೊಂದಿದ್ದಾಳೆ. ಎಲ್ಲಿ ವಾಸಿಸಬೇಕು, ಯಾರೊಂದಿಗೆ ಜೀವನ ನಡೆಸಬೇಕು ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ಆಕೆಗೆ ಕಾನೂನುಬದ್ಧವಾಗಿ ಇದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಇದೇ ವೇಳೆ, ಘಟನೆ ನಡೆದ ತಕ್ಷಣ ಕಾಲೇಜು ಆಡಳಿತ ಮಂಡಳಿ ಅಥವಾ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಯುವತಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ನಗರದಿಂದ ಹೊರಹೋಗುವ ಮುನ್ನವೇ ತಡೆದು ಅಗತ್ಯ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿತ್ತು ಎಂಬ ಅಭಿಪ್ರಾಯವನ್ನೂ ಆಯುಕ್ತರು ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಂಸ್ಥೆಯ ಆವರಣದಲ್ಲೇ ಇಂತಹ ಘಟನೆ ನಡೆದಿರುವುದು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಯುವತಿಯ ಇಚ್ಛೆ, ಆಕೆಯ ಸುರಕ್ಷತೆ ಹಾಗೂ ಘಟನೆಯ ಹಿಂದಿರುವ ನೈಜ ಸಂಗತಿಗಳು ಪೊಲೀಸ್ ತನಿಖೆಯಲ್ಲಿ ಸ್ಪಷ್ಟವಾಗಬೇಕಿದೆ.




