ಶಿವಮೊಗ್ಗ : ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಪತ್ನಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರದಲ್ಲಿ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ಮೆಸೇಜ್ ಮಾಡಿದ್ದ ಸ್ವಾತಿ, ಫೇಸ್‌ಬುಕ್‌ನಲ್ಲಿ ಪೊಲೀಸ್ ಸಿಬ್ಬಂದಿ ಮೋಹನ್ ಎಂಬವರು ತನಗೆ ಮೆಸೇಜ್ ಮಾಡಿದ್ದರು. ಬ್ಲಾಕ್ ಮಾಡಿದ್ದಕ್ಕೆ ಅವರು ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ’ ಎಂದು ತಿಳಿಸಿದ್ದಾರೆ.
ಸ್ವಾತಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಮೃತ ಮಹಿಳೆಯ ತಾಯಿ ನೀಡಿದ ದೂರಿನ ಮೇರೆಗೆ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ.
ಕೆಎಸ್‌ಐಎಸ್‌ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದ ಸ್ವಾತಿ ಪತಿ ಜಗದೀಶ್ ಅವರು ಫೆ.14ರಂದು ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.



