ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಎಂಬಲ್ಲಿ 2024ರ ಡಿ.11ರಂದು ಪತ್ನಿಯನ್ನು ಕೊಲೆಗೈದು ಹಾರ್ಟ್ ಅಟ್ಯಾಕ್ನಿಂದ ಬಿದ್ದು ಮೃತಪಟ್ಟಿರುವುದಾಗಿ ಸುಳ್ಳು ಹೇಳಿ ಬಳಿಕ ಕೊಲೆಗೈದಿರುವುದಾಗಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಪತಿಗೆ ನ್ಯಾಯಾಲಯವು ಐದು ವರ್ಷದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ಆರೋಪಿ ಸಂಜೀವ ನಾಯ್ಕ ಎಂದು ತಿಳಿದು ಬಂದಿದೆ.
ಪತ್ನಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಪತಿ ಸಂಜೀವ ನಾಯ್ಕ ನೆರೆಮನೆಯವರಿಗೆ ತಿಳಿಸಿ ಆಸ್ಪತ್ರೆಗೆ ದಾಖಲಿಸಿದ್ದ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಮಹಿಳೆಯ ಮೃತದೇಹದಲ್ಲಿ ಗಾಯಗಳಿರುವುದನ್ನು ಕಂಡ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಸಂಶಯಾಸ್ಪದ ಮರಣ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ನಾಗರಾಜ್ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮೃತ ಮಹಿಳೆಯ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಅದರಂತೆ ವಿಚಾರಣೆ ನಡೆಸಿದ ಮಂಗಳೂರಿನ 2 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಆರೋಪಿಗೆ ಸೆ.105 ಪಾರ್ಟ್ 2 ಅಡಿ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದರೆ 6 ತಿಂಗಳು ಜೈಲು ವಿಧಿಸಿದ್ದಾರೆ. ಸೆ. 240 ಅಡಿ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ ಎಂದು ತಿಳಿದು ಬಂದಿದೆ.




