ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ನಿಂದ ನಿರಾಳತೆ ದೊರೆತಿದೆ. ಆರೋಪಿಗಳಿಗೆ ಈ ಹಿಂದೆ ಮಂಜೂರಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದ ಪ್ರಕರಣದ ಎ3 ಪವನ್, ಎ4 ರಾಘವೇಂದ್ರ, ಎ5 ನಂದೀಶ್, ಎ9 ಧನರಾಜ್ ಹಾಗೂ ಎ10 ವಿನಯ್ ಅವರ ಜಾಮೀನು ಮುಂದುವರಿದಿದೆ.
ಐವರು ಆರೋಪಿಗಳಿಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಈ ಹಿಂದೆ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ನ ಈ ಆದೇಶದಿಂದ ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಹಾಗೂ ವಿನಯ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದ್ದು, ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ನಡೆಸಿದ್ದ ಕಾನೂನು ಹೋರಾಟಕ್ಕೆ ಹಿನ್ನಡೆಯಾಗಿದೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಸಂಬಂಧಿಸಿದ ವಿಚಾರಣೆ ಹಾಗೂ ಕಾನೂನು ಪ್ರಕ್ರಿಯೆಗಳು ಮುಂದುವರಿದಿರುವ ನಡುವೆ, ಐವರು ಆರೋಪಿಗಳ ಜಾಮೀನು ರದ್ದತಿ ಕುರಿತ ಸುಪ್ರೀಂ ಕೋರ್ಟ್ನ ಈ ಆದೇಶ ಮಹತ್ವ ಪಡೆದುಕೊಂಡಿದೆ.




