ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ನಡೆದಿದೆ.
ಮೃತಪಟ್ಟವರನ್ನು ಸೋಮವಾರಪೇಟೆ ಸಮೀಪದ ಕಲ್ಕಂದೂರು ಗ್ರಾಮದ ಕೃಷ್ಣಪ್ಪ ಅವರ ಪುತ್ರ ವಿಶ್ವಾಸ್ (31) ಎಂದು ತಿಳಿಯಲಾಗಿದೆ. ವಿಶ್ವಾಸ್ ಅವರು ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದು ಬಂದಿದೆ
ವಿಶ್ವಾಸ್ ಅವರು KA-01-HX-1968 ನೋಂದಣಿಯ ಸ್ಕೂಟರ್ನಲ್ಲಿ ಮನೆಯಿಂದ ಕೆಲಸಕ್ಕೆ ತೆರಳುತ್ತಿದ್ದ ವೇಳೆ, ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ KA-12-MA-8653 ನೋಂದಣಿಯ ಕಾರು ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಕಾರನ್ನು ನಂದನ್ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವೆಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದ ತೀವ್ರತೆಗೆ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟ ವಿಶ್ವಾಸ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಅವರನ್ನು ಕಡಬದ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



