ಉಡುಪಿ: ಸಾಸ್ತಾನ ಟೋಲ್ ಪ್ಲಾಝಾ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಗುಂಡ್ಮಿ ಅಂಬಾಗಿಲು ಬಳಿ ಈ ದುರ್ಘಟನೆ ನಡೆದಿದೆ.
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಹಾರಿದೆ. ಅಪಘಾತದ ಬೆನ್ನಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಾರಿಗೆ ಬೆಂಕಿ ವ್ಯಾಪಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮತ್ತೊಂದೆಡೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವ ಕಾರ್ಯ ಕೈಗೊಂಡಿದ್ದಾರೆ.
ಕಾರಿನಲ್ಲಿದ್ದವರ ಸ್ಥಿತಿಗತಿ, ಗಾಯಾಳು ಮಹಿಳೆಯ ಗುರುತು ಹಾಗೂ ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



