ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಬಂಧಿತ ಏಳು ಅಪ್ರಾಪ್ತ ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಬಂಧಿತರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತರಿಗೆ ಬೈಕ್ ನೀಡಿದ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಸೋಮವಾರ ರಾತ್ರಿ ಮುರುಡೇಶ್ವರದ ಬೈಲೂರು ಭಾಗದ ತೆಂಗಾರ್ ರಸ್ತೆಯ ಅಕ್ಕಪಕ್ಕದಲ್ಲಿರುವ ಕೆಲವು ಹಿಂದೂ ಮನೆಗಳ ಮೇಲೆ ಮೂವರು ಬೈಕ್‌ಗಳಲ್ಲಿ ಬಂದ ಏಳು ಮಂದಿ ಅಪ್ರಾಪ್ತರು ಏಕಾಏಕಿ ಕಲ್ಲುತೂರಾಟ ನಡೆಸಿದ್ದರು. ಸ್ಥಳದಲ್ಲಿದ್ದ ಯುವಕರು ತಕ್ಷಣವೇ ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಉಳಿದ ಆರೋಪಿಗಳನ್ನು ಬಂಧಿಸಿದರು.
ಈ ಘಟನೆಗೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ಮುರುಡೇಶ್ವರ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ವಿಷಯ ತಿಳಿದ ನಂತರ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರಕರಣದ ನಿಖರ ಕಾರಣ ಮತ್ತು ಹಿನ್ನಲೆ ಪತ್ತೆಹಚ್ಚಲು ಪೊಲೀಸ್ ಇಲಾಖೆ ತನಿಖೆಯನ್ನು ತೀವ್ರಗೊಳಿಸಿದೆ.



