Home Karnataka News ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ : ವಿದ್ಯಾರ್ಥಿಗಳ ಎದುರೇ ಮುಖ್ಯ ಶಿಕ್ಷಕ ಸಾವು

ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ : ವಿದ್ಯಾರ್ಥಿಗಳ ಎದುರೇ ಮುಖ್ಯ ಶಿಕ್ಷಕ ಸಾವು

ಹಾಸನ : ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

 

ಕೇರಳಾಪುರ ಗ್ರಾಮದ ಸತೀಶ್ (53) ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕರಾಗಿದ್ದಾರೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

 

ಸೋಮವಾರ ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ತಕ್ಷಣ ಸಹ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ.

 

ಕೂಡಲೇ ಇತರ ಶಿಕ್ಷಕರು ನೆರವಿಗೆ ಧಾವಿಸಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಈ ಏಕಾಏಕಿ ನಡೆದ ಘಟನೆಯಿಂದ ಶಾಲೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

 

ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.