Home Latest ಮಾರ್ಚ್ 11ರಿಂದ ಆರೋಗ್ಯ ಇಲಾಖೆ ಅನಿರ್ದಿಷ್ಟಾವಧಿ ಮುಷ್ಕರ : ಒಪಿಡಿ ಬಂದ್ ಮಾಡಲಾಗುವುದೆಂದು ಎಚ್ಚರಿಕೆ…!!

ಮಾರ್ಚ್ 11ರಿಂದ ಆರೋಗ್ಯ ಇಲಾಖೆ ಅನಿರ್ದಿಷ್ಟಾವಧಿ ಮುಷ್ಕರ : ಒಪಿಡಿ ಬಂದ್ ಮಾಡಲಾಗುವುದೆಂದು ಎಚ್ಚರಿಕೆ…!!

ಉಡುಪಿ, ಮಾ. 5: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಅಧ್ಯಕ್ಷ ಡಾ. ನಿಕಿನ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರೂ ಯಾವುದೇ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಮುಷ್ಕರ ಅನಿವಾರ್ಯವಾಗಿದೆ ಎಂದು ಹೇಳಿದರು.

ಮಾರ್ಚ್ 1ರಿಂದ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧಿಕಾರಿಗಳು ಮತ್ತು ನೌಕರರು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ತುರ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಒಪಿಡಿ ಸೇವೆಗಳು ಬಂದ್ ಮಾಡಲಾಗುವುದು ಎಂದು ತಿಳಿಸಿದರು. ಮಾರ್ಚ್ 15ರವರೆಗೆ ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದಲ್ಲಿ ಮಾರ್ಚ್ 16ರಿಂದ ತುರ್ತು ಸೇವೆಗಳನ್ನೂ ಸ್ಥಗಿತಗೊಳಿಸಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಆರೋಗ್ಯ ಇಲಾಖೆಯಲ್ಲಿ ನಿವೃತ್ತಿ ಸೇರಿದಂತೆ ವಿವಿಧ ಕಾರಣಗಳಿಂದ ಅಧಿಕಾರಿಗಳು ಹಾಗೂ ನೌಕರರ ಸಂಖ್ಯೆ ಕಡಿಮೆಯಾಗುತ್ತಿದ್ದು, ಖಾಲಿ ಹುದ್ದೆಗಳ ಭರ್ತಿಯಿಲ್ಲದ ಕಾರಣ ಈಗಿನ ಸಿಬ್ಬಂದಿಯ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕ ಔಷಧ ಪೂರೈಕೆ ಆಗುತ್ತಿಲ್ಲವೆಂದು ಆರೋಪಿಸಿದರು. ಇನ್ಸುಲಿನ್, ರೇಬಿಸ್ ಲಸಿಕೆ, ಐವಿ ದ್ರವಗಳು ಹಾಗೂ ಆಂಟಿಬಯಾಟಿಕ್ ಔಷಧಿಗಳ ಕೊರತೆಯಿಂದ ರೋಗಿಗಳಿಗೆ ತೊಂದರೆ ಆಗುತ್ತಿದೆ ಎಂದರು.

ಸ್ಥಳೀಯ ನಿಧಿಗಳ ಮೂಲಕ ಔಷಧ ಖರೀದಿಸಲು ಅಗತ್ಯ ಹಣ ಲಭ್ಯವಿಲ್ಲದ ಕಾರಣ ವೈದ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಐದು ವರ್ಷಗಳಿಂದ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರಿಗೆ ಪದೋನ್ನತಿ ನೀಡಿಲ್ಲ. ಡೇಟಾ ಇಲ್ಲ ಎಂಬ ನೆಪವೊಡ್ಡಿ ಪದೋನ್ನತಿ ಪ್ರಕ್ರಿಯೆ ನಿಲ್ಲಿಸಲಾಗಿದೆ ಎಂದು ದೂರಿದರು. ಅಲ್ಲದೆ, ಮೂರು ತಿಂಗಳಿಗೊಮ್ಮೆ ಮಾತ್ರ ವೇತನ ಪಾವತಿಯಾಗುತ್ತಿರುವುದು ಸಿಬ್ಬಂದಿಯ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು.

ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ಈಗಾಗಲೇ ತರಲಾಗಿದೆ. ಆದರೆ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಡಾ. ಸಂದೀಪ್, ಕಾರ್ಯದರ್ಶಿ ಡಾ. ರಾಜೇಶ್ ಸಿ.ಎಸ್., ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ದಿನಕರ ಶೆಟ್ಟಿ, ಆರೋಗ್ಯ ಇಲಾಖೆ ಕೇಂದ್ರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆನಂದ್ ಜತ್ತನ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.