Home Crime ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

ಉಡುಪಿ: ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಒಬ್ಬನನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ವಿಘ್ನೇಶ್ವರ ಐತಾಳ್ (56) ಎಂದು ಗುರುತಿಸಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಸುಮಾರು 10 ಪ್ರಕರಣಗಳು ದಾಖಲಾಗಿವೆ. ಈ ಎಲ್ಲಾ ಪ್ರಕರಣಗಳಲ್ಲಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಆರೋಪಿ ವಿಘ್ನೇಶ್ವರ ಐತಾಳ್ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ನ್ಯಾಯಾಲಯವು 10 ಕ್ಕಿಂತಲೂ ಹೆಚ್ಚು ಬಾರಿ ವಾರೆಂಟ್ ಹೊರಡಿಸಿತ್ತು. ಬಳಿಕ ನ್ಯಾಯಾಲಯವು ಆತನನ್ನು ತಲೆಮರೆಸಿಕೊಂಡ ಆರೋಪಿ ಎಂದು ಘೋಷಿಸಿತ್ತು.

ಉಡುಪಿ ನಗರ ಪೊಲೀಸ್ ಠಾಣೆಯ ಪ್ರಭಾರ ನಿರೀಕ್ಷಕರಾದ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ತಲಘಟ್ಟಪುರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.