ಉಡುಪಿ : ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿತು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲ. ತಾಲ್ಲೂಕುವಾರು ನೀಡಿರುವ ವರದಿ ಅನ್ವಯ ಮೇ 15ರವರೆಗೆ ನೀರಿನ ಸಮಸ್ಯೆ ಉಂಟಾಗದು. ಆದರೂ ಸಹ ಈಗಿನಿಂದಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ನೀರು ಸರಬರಾಜಿಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ಕಾರ್ಕಳದ 14, ಕುಂದಾಪುರದ 36, ಬೈಂದೂರಿನ 15, ಉಡುಪಿಯ 9, ಬ್ರಹ್ಮಾವರದ 13, ಕಾಪುವಿನ 4 ಹಾಗೂ ಹೆಬ್ರಿ ತಾಲ್ಲೂಕಿನ 2 ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಸಾಲಿಗ್ರಾಮದ 5 ಹಾಗೂ ಬೈಂದೂರಿನ 19 ವಾರ್ಡ್‌ಗಳಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುವ ಸಾಧ್ಯತೆಗಳಿರುವುದಾಗಿ ಗುರುತಿಸಲಾಗಿದೆ ಎಂದರು.
ನೀರಿನ ಮೂಲಗಳು ಎಷ್ಟು ದಿನಗಳವರೆಗೆ ಬರುತ್ತವೆ ಎಂಬ ಬಗ್ಗೆ ಎರಡು ದಿನಗಳ ಒಳಗಾಗಿ ಪರಿಶೀಲಿಸಿ ವರದಿ ನೀಡಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.
ಸರ್ಕಾರಿ ಬಾವಿಗಳನ್ನು, ಕೆರೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಪ್ರಾಣಿ, ಪಕ್ಷಿಗಳಿಗೂ ಕುಡಿಯುವ ನೀರಿನ ಅನುಕೂಲ ಮಾಡಿಕೊಡಬೇಕು. ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ಸ್ಥಳೀಯ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಕರೆದು ಯೋಜನೆ ರೂಪಿಸಬೇಕು ಎಂದರು.
ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ದನಕರುಗಳಿಗೆ ಮೇವಿನ ಕೊರತೆ ಕಂಡು ಬಂದಿಲ್ಲ. ಪ್ರಸ್ತುತ ಎಲ್ಲಾ ತಾಲ್ಲೂಕುಗಳಲ್ಲಿ ಮುಂದಿನ 38 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನಿದೆ ಎಂದು ತಿಳಿಸಿದರು.
ಅತಿ ಹೆಚ್ಚು ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಔಷಧಿಗಳನ್ನು ಹಾಗೂ ಒ.ಆರ್.ಎಸ್ ಪ್ಯಾಕೇಟ್‌ಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಹಾಯಕ ಆಯುಕ್ತೆ ರಶ್ಮಿ ಇದ್ದರು.
ನೀರಿನ ಕೊರತೆ ಕಂಡುಬಂದಲ್ಲಿ ಖಾಸಗಿ ಬಾವಿಗಳನ್ನು ಗುರುತಿಸಿ ತಕ್ಷಣಕ್ಕೆ ನೀರು ನೀಡಲು ಸನ್ನದ್ಧರಾಗುವುದರೊಂದಿಗೆ ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಸ್ವರೂಪ ಟಿ.ಕೆ. ಜಿಲ್ಲಾಧಿಕಾರಿ
ಬೇಸಿಗೆ ಕಾಲದಲ್ಲಿ ಅಗ್ನಿ ಅನಾಹುತಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು ಇರುತ್ತವೆ. ಅಗ್ನಿ ಅನಾಹುತಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಪರಿಶೀಲನೆ ಮಾಡಿ ವರದಿ ನೀಡಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದರು. ಅರಣ್ಯ ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಉಂಟಾಗಬಹುದು. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.



