ಉಡುಪಿ, ಮಾ.13: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಗತ್ಯವಿದ್ದು, ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸರಕಾರಿ ಜಾಗವನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಾಸಕರ ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಪ್ರತಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.



