Home Crime ಉಡುಪಿ: ಸಂಚಾರ ನಿಯಮ ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಪ್ರಯಾಣ :...

ಉಡುಪಿ: ಸಂಚಾರ ನಿಯಮ ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಪ್ರಯಾಣ : ವಿಡಿಯೋ ವೈರಲ್…!!

ಉಡುಪಿ : ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು,
ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಒಂದೇ ದ್ವಿಚಕ್ರ ವಾಹನದಲ್ಲಿ ಐವರು ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಸಂಚರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಉಡುಪಿ ನಗರದಲ್ಲಿ ವಾಹನ ಸವಾರರು ಪ್ರತಿ ಹೆಜ್ಜೆಯಲ್ಲೂ ಟ್ರಾಫಿಕ್ ಪೊಲೀಸರ ತಪಾಸಣೆಗೆ ಒಳಗಾಗುತ್ತಿದ್ದಾರೆ. ಆದರೆ ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರನ್ನು ಪ್ರಶ್ನಿಸುವವರೇ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಮಣಿಪಾಲದ ವಿದ್ಯಾರ್ಥಿಗಳು ಪದೇ ಪದೇ ಸಂಚಾರ ನಿಯಮಗಳನ್ನು ಮುರಿಯುತ್ತಿರುವುದು ಗಮನಕ್ಕೆ ಬಂದಿದ್ದರೂ, ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅತ್ಯಂತ ಹೆಚ್ಚು ಅಪಘಾತಗಳು ಸಂಭವಿಸುವ ಉಡುಪಿ-ಮಣಿಪಾಲ ರಸ್ತೆಯಲ್ಲಿ ವಿದ್ಯಾರ್ಥಿಗಳು ಈ ರೀತಿ ನಿರ್ಲಕ್ಷ್ಯದಿಂದ ವರ್ತಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ವಿದ್ಯಾರ್ಥಿಗಳ ಈ ಹುಚ್ಚಾಟಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.