ಮಂಗಳೂರು: ದ ಕ ಜಿಲ್ಲೆಯ ಹಿರಿಯ ಆರ್ಎಸ್ಎಸ್ ಮುಖಂಡನ ಮನೆ ಮೇಲಿನ ದಾಳಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಸಂಬಂಧಿಸಿದಂತೆ ಜಿಲ್ಲಾ ಎಸ್ಪಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಘಟನೆ ನಂತರ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನಗೊಂಡಿತ್ತು. ಹಿಂಸಾಚಾರ ತಡೆಗೆ ಪೊಲೀಸರು ವಿವಿಧ ಕ್ರಮ ಕೈಗೊಂಡಿದ್ದರು. ಆದರೆ, ಯಾವುದೇ ಪ್ರಕರಣದಲ್ಲಿ ಶಾಮೀಲಾಗಿರದ ಆರ್ಎಸ್ಎಸ್ ಹಾಗೂ ಹಿಂದೂ ಮುಖಂಡರ ಮನೆಗಳಿಗೆ ರಾತ್ರಿ ವೇಳೆ ತೆರಳಿ ಫೋಟೊ ತೆಗೆಸಿದ್ದರು.
ಪೊಲೀಸರ ಈ ನಡೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಕರ್ನಾಟಕವು ಪೊಲೀಸ್ ರಾಜ್ಯವಾಗುವತ್ತ ಸಾಗುತ್ತಿದೆಯಾ ಎಂದು ಹಿಂದೂ ನಾಯಕರು ಪ್ರಶ್ನಿಸಿದ್ದರು. ಈ ವಿಚಾರವಾಗಿ ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ. ರಾಧಾ ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಜೂನ್ 1 ರಂದು ಯು.ಜಿ. ರಾಧಾ ಅವರ ಉಪ್ಪಿನಂಗಡಿ ಮನೆಗೆ ರಾತ್ರಿ ಬಂದಿದ್ದ ಪೊಲೀಸರು ಫೋಟೊ ತೆಗೆದು ಅಪ್ಲೋಡ್ ಮಾಡಿದ್ದರು. ನಮಗೆ ಹಿರಿಯ ಅಧಿಕಾರಿಗಳ ಆದೇಶವಿದೆ ಎಂದು ಪೊಲೀಸರು ಹೇಳಿದ್ದರು. ಆದರೆ, ದಾಖಲೆ ತೋರಿಸಿರಲಿಲ್ಲ.
ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ ಎಂದು ಯು.ಜಿ. ರಾಧಾ ಹೈಕೋರ್ಟ್ ಮೊರೆ ಹೋಗಿದ್ದರು. ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು, ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರೂ. ಮಾನನಷ್ಟ ಪರಿಹಾರ ನೀಡುವಂತೆ ನಿರ್ದೇಶಿಸಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು.
ಯು.ಜಿ.ರಾಧಾ ಅವರು ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ನೀಡಿದ್ದಾರೆ. ಈಗಾಗಲೇ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾ ಎಸ್ಪಿಗೆ ನೋಟಿಸ್ ಜಾರಿ ಮಾಡಿದೆ. ಬೇರೆ ಬೇರೆ ದೂರುಗಳ ಆಧಾರದಲ್ಲಿ ನೊಟೀಸ್ ನೀಡಲಾಗಿದೆ.