ಬಂಟ್ವಾಳ : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳದ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಬಂಧಿತ ಆರೋಪಿ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ (ಅಪರಾಧ ಸಂಖ್ಯೆ: 166/2017) ಈತ ಪ್ರಮುಖ ಆರೋಪಿಯಾಗಿದ್ದ. ಅಂದಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ಪತ್ತೆಗಾಗಿ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.
ಈ ಕುರಿತು ಖಚಿತ ಮಾಹಿತಿ ಸಂಗ್ರಹಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ ಕೆ. ಹಾಗೂ ಸಿಬ್ಬಂದಿಗಳಾದ ಸಂತೋಷ್ ಮತ್ತು ಶಿವಾನಂದ ಮಡ್ಡಿ ಅವರ ತಂಡ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಳ್ಳಾಚಿಯಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದೆ.
ಬಂಧಿತ ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



