Home Crime ತುಮಕೂರು: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವು…!!

ತುಮಕೂರು: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವು…!!

ತುಮಕೂರು: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ಮೃತರನ್ನು ಕಾಂತರಾಜು (45) ಎಂದು ತಿಳಿಯಲಾಗಿದೆ.

ಇಸ್ಪೀಟ್ ಆಡುತ್ತಿದ್ದ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಕಾಂತರಾಜು ಠಾಣೆಯಲ್ಲೇ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ಸಾವಿನ ಹಿನ್ನೆಲೆ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸರ ದೌರ್ಜನ್ಯವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರತಿಭಟನೆಯಲ್ಲಿ ತೊಡಗಿದರು. ಅಲ್ಲದೆ ಠಾಣೆಗೆ ಬೀಗ ಜಡಿದು ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ತೀವ್ರಗೊಂಡ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್‌ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಎಸ್‌ಪಿ ಅವರ ಭರವಸೆಯ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂತೆಗೆದುಕೊಂಡರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ನಿಜಸ್ವರೂಪ ತನಿಖೆಯಿಂದಲೇ ಬಹಿರಂಗವಾಗಬೇಕಿದೆ