Home Crime ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಮಂಗಳೂರು : ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಫರಾಜ್ @ ಮೊಹಮ್ಮದ್ ಫರಾಜ್, ಮದನಿನಗರ ದೇರಳಕಟ್ಟೆ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ನಂತರ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಮತ್ತು ಕಳವು ಸಂಬಂಧಿತ ಎರಡು ಪ್ರಕರಣಗಳು, ಉತ್ತರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಹಾಗೂ ದರೋಡೆಗೆ ಸಂಬಂಧಿಸಿದ ಎರಡು ಪ್ರಕರಣಗಳು, ಬರ್ಕೆ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಒಂದು ಪ್ರಕರಣ ಹಾಗೂ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಒಂದು ಪ್ರಕರಣ ದಾಖಲಾಗಿವೆ.

ಈತನು ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಪ್ರಸ್ತುತ ಈತನ ವಿರುದ್ಧ ಆರು ವಾರಂಟ್ ಹಾಗೂ ಒಂದು ಪ್ರೊಕ್ಲಮೇಶನ್ ಜಾರಿಯಲ್ಲಿದೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸಿಸಿಬಿ ಪೊಲೀಸರು ಉರ್ವ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.