Home Crime ಕಡಬ : ಭೀಕರ ಕಾರು ಅಪಘಾತ : ಮೂವರು ಗಂಭೀರ

ಕಡಬ : ಭೀಕರ ಕಾರು ಅಪಘಾತ : ಮೂವರು ಗಂಭೀರ

ಕಡಬ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದ ಇಕೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಒಂಬತ್ತು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ.

ಉಳಿದಂತೆ ಪ್ರಿಯಾ, ಸಂಜನಾ ,ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಧಾವಿಸಿ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಗಾಯಾಳುಗಳನ್ನು ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಂಭೀರವಾಗಿ ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆ ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ‌ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಯಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.