ಹಜಾರಿಬಾಗ್: ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ಉಂಟಾಗಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ನಗರದ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಝಂಡಾ ಚೌಕ್ ಪ್ರದೇಶದಲ್ಲಿ ಎರಡು ರಾಮನವಮಿ ಮೆರವಣಿಗೆಗಳು ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೆರವಣಿಗೆಯ ಸಂದರ್ಭ ಏಕಾಏಕಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಹಲ್ಲೆ ನಡೆದಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಸಿಲ್ವಾರ್ ಗ್ರಾಮದ ನಿವಾಸಿ ಪ್ರಿನ್ಸ್ ಕುಮಾರ್ (21) ಹಾಗೂ ಬಡಾ ಬಜಾರ್ ಗ್ವಾಲ್ಟೋಲಿ ಪ್ರದೇಶದ ಅಭಿಷೇಕ್ ಕುಮಾರ್ (21) ಎಂದು ಗುರುತಿಸಲಾಗಿದೆ. ಇಬ್ಬರೂ ರಾಮನವಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಾಗಿದ್ದಾರೆ.
ಘಟನೆಯ ನಂತರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದು, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.





