ಉಡುಪಿ,: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಮಾನೈ ಪ್ರದೇಶದಲ್ಲಿರುವ ಸರ್ಕಾರಿ ಕ್ರೀಡಾಂಗಣವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಕೆಲವರು ಯತ್ನಿಸುತ್ತಿರುವುದಾಗಿ ಆರೋಪಿಸಿ ತುಳುನಾಡ ರಕ್ಷಣಾ ವೇದಿಕೆ, ಕಾಪು ತಾಲೂಕು ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು ಹಿರಿಯಡ್ಕ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯವರು, ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಅದರ ಅನ್ವಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
ಆದರೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಮುನ್ನವೇ ಭಾನುವಾರದ ಸರ್ಕಾರಿ ರಜೆ ದಿನವನ್ನು ದುರುಪಯೋಗಪಡಿಸಿಕೊಂಡು ಗೋವಿಂದ ನಾಯಕ್ ಹಾಗೂ ಅವರ ಪುತ್ರರಾದ ಕೃಷ್ಣಾನಂದ ನಾಯಕ್ ಮತ್ತು ಶಿವಾನಂದ ನಾಯಕ್ ಅವರು ಜೆಸಿಬಿ ಯಂತ್ರದ ಸಹಾಯದಿಂದ ಕ್ರೀಡಾಂಗಣದ ಮಧ್ಯಭಾಗದಲ್ಲಿ ಕಾಲುವೆ ತೋಡಿ ಮೈದಾನವನ್ನು ಹಾನಿಗೊಳಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆಯಿಂದ ಸ್ಥಳೀಯ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಭಾರೀ ಅಡ್ಡಿಯಾಗಿದ್ದು, ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಮಕ್ಕಳಿಗೆ “ಇದು ನಮ್ಮ ಸ್ವಂತ ಜಾಗ” ಎಂದು ಹೇಳಿ ಆಟವಾಡದಂತೆ ಬೆದರಿಕೆ ಹಾಕಲಾಗುತ್ತಿದೆ ಎಂದು ಸಂಘಟನೆ ಆರೋಪಿಸಿದೆ.
ತುಳುನಾಡ ರಕ್ಷಣಾ ವೇದಿಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಗ್ರಾಮ ಲೆಕ್ಕಾಧಿಕಾರಿಗಳಿಂದ ಸ್ಥಳ ಪರಿಶೀಲನೆ ಶೀಘ್ರ ನಡೆಸಬೇಕು, ಸರ್ವೇ ಪೂರ್ಣಗೊಳ್ಳುವವರೆಗೆ ಯಾವುದೇ ಒತ್ತುವರಿ ನಡೆಯದಂತೆ ತಡೆಯಬೇಕು, ಮಕ್ಕಳಿಗೆ ಸುರಕ್ಷಿತವಾಗಿ ಆಟವಾಡಲು ಪೊಲೀಸ್ ಭದ್ರತೆ ಒದಗಿಸಬೇಕು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಈ ವೇಳೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ, ಕಾಪು ತಾಲೂಕು ಅಧ್ಯಕ್ಷ ನಿತೀನ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕುಲಾಲ್, ಬೈರಂಪಳ್ಳಿ ಘಟಕ ಅಧ್ಯಕ್ಷ ಕೃಷ್ಣಾನಂದ ನಾಯಕ್, ಘಟಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕುಲಾಲ್, ಉಪಾಧ್ಯಕ್ಷ ಗುಣಾಕಾರ್, ಹಾಗೂ ಕಾರ್ತಿಕ್ ಕುಮಾರ್, ಸಚಿನ್ ಕುಮಾರ್ ಶೆಟ್ಟಿ, ಅಜಯ್ ಕುಲಾಲ್, ಗೋಪಾಲ ಕುಲಾಲ್, ಕಿರಣ್ ಕುಮಾರ್, ಆದಿತ್ಯ, ಅಭಿನಂದನ್, ರಕ್ಷಿತ್, ಸ್ವಾತಿಕ್ ನಾಯಕ್, ಗಣೇಶ್ ಕುಲಾಲ್, ರಾಕೇಶ್ ಕುಲಾಲ್, ಮಂಜುನಾಥ್ ಕುಲಾಲ್, ಹರ್ಷ ಪೂಜಾರಿ, ಶೋಧನ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಸತೀಶ್ ಕುಲಾಲ್, ಪ್ರದೀಪ್, ಸುರೇಶ್ ಕುಲಾಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಾರ್ವಜನಿಕ ಹಿತದೃಷ್ಟಿಯಿಂದ ಅಧಿಕಾರಿಗಳು ತಕ್ಷಣ ಜಾಗೃತಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ





