ಕೋಟ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಸರ್ಕಲ್ ಬಳಿ ಸಂಭವಿಸಿದೆ.
ಗಾಯಗೊಂಡ ಸವಾರನನ್ನು ಸ್ಥಳೀಯ ನಿವಾಸಿ ಪರಮೇಶ್ವರ್ ಭಟ್ ಎಂದು ಗುರುತಿಸಲಾಗಿದೆ.
ಪರಮೇಶ್ವರ್ ಭಟ್ ಅವರು ಸರ್ವಿಸ್ ರಸ್ತೆಯ ಮುಖಾಂತರ ಬಂದು ಸಾಲಿಗ್ರಾಮ ಪೇಟೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಉಡುಪಿಯಿಂದ ಕುಂದಾಪುರದ ಕಡೆಗೆ ಅತೀ ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್‌ಗೆ ನೇರವಾಗಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





