ಬೆಳ್ತಂಗಡಿ: ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಿಟಾಚಿ ಬಳಸಿ ಬೆಲೆಬಾಳುವ ಮರಗಳನ್ನು ಕಡಿದು ಕಳ್ಳತನ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಆರೋಪಿಗಳಿಂದ 33.75 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಕಡಿದು ದಾಸ್ತಾನು ಮಾಡಲಾಗಿದ್ದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ವಿವಿಧ ಜಾತಿಯ 14.500 ಮೀಟರ್ ಉದ್ದದ ಮರಗಳು, 30 ಲಕ್ಷ ರೂಪಾಯಿ ಮೌಲ್ಯದ ಒಂದು ಹಿಟಾಚಿ ಯಂತ್ರ, 60 ಸಾವಿರ ರೂಪಾಯಿ ಮೌಲ್ಯದ ಮರ ಕಡಿಯುವ ಯಂತ್ರ ಹಾಗೂ 15 ಸಾವಿರ ರೂಪಾಯಿ ಮೌಲ್ಯದ ಕಬ್ಬಿಣದ ಸಂಕೋಲೆಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಡೊಂಕಬೆಟ್ಟು ನಿವಾಸಿ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪ್ರಕಾಶ್ ಪೂಜಾರಿ ಮತ್ತು ಹಿಟಾಚಿ ಮಾಲಕ ಹಾಗೂ ಅದರ ನಿರ್ವಾಹಕ (ಆಪರೇಟರ್) ಕಾರ್ಕಳ ತಾಲೂಕಿನ ನೂರಲೆಟ್ಟು ಗ್ರಾಮದ ನಿವಾಸಿ ಕರುಣಾಕರ ಭಂಡಾರಿ ವಿರುದ್ಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯು ಆರೋಪಿಗಳಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಅರಣ್ಯಾಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬೆಳ್ತಂಗಡಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್.ಟಿ.ಎಂ. ಅವರ ನೇತೃತ್ವದ ತಂಡವು ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.