ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡೆಗಣನೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಏ.14ರಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಬಳಿಗೆ ಕರ್ನಾಟಕ ರಕ್ಷಣಾ ವೇದಿಕೆ ನಿಯೋಗ ತೆರಳಲಿದೆ. ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದರೆ ಏ.15ರ ಬಳಿಕ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಇಲಾಖೆ ಕರ್ನಾಟಕವನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ. ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡವನ್ನು ಕೈಬಿಟ್ಟು ಹಿಂದಿ, ಇಂಗ್ಲಿಷ್‌ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದರು. ನಮ್ಮ ಕಾರ್ಯಕರ್ತರು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪರೀಕ್ಷೆ ರದ್ದುಗೊಳಿಸಿದರು.
ರಾಜ್ಯದಲ್ಲಿ ಬಲವಂತವಾಗಿ ಹಿಂದಿ ಹೇರಲಾಗುತ್ತಿದೆ. ಕೇಂದ್ರ ಸರ್ಕಾರ, ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಯಲ್ಲಿ ಆಂಗ್ಲ, ಹಿಂದಿಯೊಂದಿಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿ ತನ್ನ ಬದ್ಧತೆ ಪ್ರದರ್ಶಿಸಬೇಕು. ಈ ಸಂಬಂಧ ಏ.15ರೊಳಗೆ ಗಡುವು ನೀಡಿದ್ದು, ರಾಜ್ಯದ ಜನತೆಗೆ ತನ್ನ ವಾಗ್ದಾನ ನೀಡಬೇಕು.
ಒಂದು ವೇಳೆ ನಮ್ಮ ಬೇಡಿಕೆ ಕುರಿತು ತಾತ್ಸಾರ ತೋರಿದರೆ ಕರ್ನಾಟಕದ ಎಲ್ಲ ಸ್ವರೂಪದ ರೈಲು ಹಾಗೂ ರೈಲು ನಿಲ್ದಾಣ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.





