Home Karnataka News ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ/ಬಾಗಲಕೋಟೆ, ಏ. 9: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಮತದಾನ ಪ್ರಾರಂಭವಾಗಿದೆ.

ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಎರಡೂ ಕ್ಷೇತ್ರಗಳಲ್ಲಿ ಒಟ್ಟು 34 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸುಗಮ ಹಾಗೂ ಶಾಂತಿಯುತ ಮತದಾನಕ್ಕಾಗಿ ಎರಡೂ ಕ್ಷೇತ್ರಗಳಲ್ಲಿ ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಉಪಚುನಾವಣೆಯ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ.

ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್. ವೈ. ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮತದಾರರು ಯಾರ ಪರ ತೀರ್ಪು ನೀಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಹಾಗೂ ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇನ್ನೊಂದೆಡೆ, ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 20 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಮತದಾರರ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ.