Home Karnataka News ಹುಲಿಕಲ್ ಘಾಟ್ ದುರಂತ: ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು, ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಹುಲಿಕಲ್ ಘಾಟ್ ದುರಂತ: ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು, ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ, ಏಪ್ರಿಲ್ 09: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಭಾರೀ ದುರಂತ ಸಂಭವಿಸಿದ್ದು, ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮೃತರನ್ನು ರಾಘವೇಂದ್ರ (37), ರಾಜು (30) ಹಾಗೂ ಶಬ್ಬೀರ್ (40) ಎಂದು ಗುರುತಿಸಲಾಗಿದೆ. ಇವರಲ್ಲಿ ಓರ್ವ ಹೊರ ರಾಜ್ಯದ ಕಾರ್ಮಿಕರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವೇಳೆ ಇನ್ನೂ ನಾಲ್ವರಿಗೆ ಗಾಯಗಳಾಗಿದ್ದು, ಸುಮಂತ ಮತ್ತು ಪರಮೇಶ್ ಸೇರಿದಂತೆ ಗಾಯಾಳುಗಳನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾತ್ರಿ ಸಮಯದ ಹಿನ್ನೆಲೆ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.

ಈ ನಡುವೆ ಹೊಸನಗರ ತಹಶೀಲ್ದಾರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಪರಿಣಾಮ ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.