ಮಣಿಪಾಲ: ಈಶ್ವರ ನಗರದಲ್ಲಿರುವ ಕೆಎಂಎಫ್‌ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಘಟಕದ ಒಳಭಾಗದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ, ಅದರ ಕಿಡಿಗಳು ಸಮೀಪದಲ್ಲಿದ್ದ ಆಯಿಲ್‌ಗೆ ತಗುಲಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿ ಅಲ್ಲಿದ್ದ ಬಾಯ್ಲರ್ ಭಾಗಕ್ಕೂ ವಿಸ್ತರಿಸಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ತೀವ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು, ಘಟನೆಯಿಂದಾಗಿ ಘಟಕದ ಒಳಭಾಗದಲ್ಲಿ ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಮತ್ತು ನಷ್ಟದ ಅಂದಾಜು ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.





