ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಎ. 23 ಮತ್ತು 24 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಇದನ್ನು ವಿದ್ಯಾರ್ಥಿ ಸ್ನೇಹಿಯಾಗಿ ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪಾ ಟಿ. ಕೆ. ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ – 2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿಇಟಿಯನ್ನು ಜಿಲ್ಲೆಯ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. 8,746 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 11, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ 7 ಸಹಿತ ಒಟ್ಟು 23 ಕೇಂದ್ರ ಗುರುತಿಸಲಾಗಿದೆ ಎಂದರು.
ಪರೀಕ್ಷೆಗಳು ಆರಂಭವಾಗುವ ಎರಡೂವರೆ ಗಂಟೆ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ವಿದ್ಯಾರ್ಥಿಗಳ ಪರಿಶೋಧನೆ ಕಾರ್ಯವನ್ನು ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆಸಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಮತ್ತು ವಿದ್ಯಾರ್ಥಿಗಳು ಕೂಡ ಈಗಾಗಲೇ ನೀಡಿರುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದ ಅವರು, ಅಂದು ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ. ಸುಧಾಕರ್‌ನಾಯಕ್, ಜಿ.ಪಂ. ಮುಖ್ಯಯೋಜನಾಧಿಕಾರಿ ಉದಯ್ ಕುಮಾರ್‌ಶೆಟ್ಟಿ, ಡಿಡಿಪಿಯು ಮಾರುತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ವಿವಿಧ ಕಾಲೇಜು ಪ್ರಾಂಶುಪಾಲರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.





