ಡಿಸಿಎಂ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ಧಿ ಬಗ್ಗೆ ಚರ್ಚೆ…
ಬೆಂಗಳೂರು : ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು ಅಭಿವೃದ್ಧಿ ಪಡಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ದೇವಾಲಯಗಳಿವೆ. ಇವು ಪ್ರವಾಸೋದ್ಯಮಕ್ಕೆ ಪೂರಕವಾಗಿವೆ. ಹೊರ ರಾಜ್ಯಗಳಲ್ಲಿ ಉಳಿದುಕೊಂಡಿರುವ ಕರಾವಳಿ ಮೂಲದ ಉದ್ಯಮಿಗಳು ಈ ಭಾಗಗಳಲ್ಲಿ ಬಂದು ಬಂಡವಾಳ ಹೂಡುವಂತಾಗಬೇಕು. ಹೀಗಾದರೆ ಮುಂದಿನ ಎರಡ್ಮೂರು ವರ್ಷದಲ್ಲಿ ಸಮಗ್ರ ಅಭಿವೃದ್ಧಿ ಕಾಣಬಹುದು ಎಂದರು.
ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಮಂಕಾಳ್ ವೈದ್ಯ, ಕರಾವಳಿ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.