ಕುಂದಾಪುರ ತಾಲೂಕಿನ ವಂಡ್ಸೆ ಬ್ರಿಡ್ಜ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ವಂಡ್ಸೆ ಗ್ರಾಮದ SH-27 ರಸ್ತೆಯಲ್ಲಿ ಏಪ್ರಿಲ್ 28ರಂದು ರಾತ್ರಿ ಸುಮಾರು 8:20ರ ವೇಳೆಗೆ ಈ ದುರ್ಘಟನೆ ನಡೆದಿದೆ.
ಮಾಹಿತಿಯಂತೆ, ಸುಬ್ರಹ್ಮಣ್ಯ ಆಚಾರ್ಯ ಎಂಬವರು ಕಾರನ್ನು ನೆಂಪು ಕಡೆಯಿಂದ ವಂಡ್ಸೆ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ, ರಸ್ತೆ ಬಲಭಾಗಕ್ಕೆ ಬಂದು ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಬೈಕ್ ಸವಾರ ಗಣೇಶ್ ಕಾಂಚನ್ ಅವರ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕುಂದಾಪುರ ಆದರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಪರೀಕ್ಷಿಸಿ ಗಣೇಶ್ ಕಾಂಚನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಶರತ್ ಎಂಬವರು ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಡ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





