ಮಂಗಳೂರು: ಮೂರೂವರೆ ವರ್ಷ ಪ್ರಾಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಯ ಮೇಲಿನ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 ನ್ಯಾಯಾಧೀಶರು 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಮೂಲತಃ ರಾಣೆಬೆನ್ನೂರು ಬೈಲೂರಿನ ಪ್ರಸಕ್ತ ಬಜ್ಜೆಯ ನಿವಾಸಿಯಾಗಿರುವ 34 ವರ್ಷ ಪ್ರಾಯದ ವ್ಯಕ್ತಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.
2024ರ ಡಿ.18ರಂದು ಆರೋಪಿ ತಂದೆಯು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ಇನ್‌ಸ್ಪೆಕ್ಟರ್ ಸಂದೀಪ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ.
ಆರೋಪಿಗೆ ಪೊಕ್ಸೋ ಕಲಂ 10ರಡಿ 5 ವರ್ಷ ಕಠಿಣ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ಮತ್ತು ದಂಡ ತೆರಲು ತಪ್ಪಿದಲ್ಲಿ 2 ತಿಂಗಳು ಸಾದಾ ಸಜೆ ವಿಧಿಸಿದ್ದಾರೆ. ಕಲಂ 12ರಡಿ 1ವರ್ಷ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ ಹಾಗೂ ದಂಡ ಕಟ್ಟಲು ತಪ್ಪಿದಲ್ಲಿ 1 ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ.
ನೊಂದ ಬಾಲಕಿಗೆ ಪರಿಹಾರವಾಗಿ ದಂಡದ 20 ಸಾವಿರ ರೂ. ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 30 ಸಾವಿರ ರೂ. ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ವಾದ ಮಂಡಿಸಿದ್ದರು.