ಬೆಳಗಾವಿ: ನಗರದಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಶನಿವಾರ (ಇಂದು) ಆತ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ರಮೇಶ್ ಕಿಲಾರಿ ಎಂದು ಗುರುತಿಸಲಾದ ವ್ಯಕ್ತಿ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಈ ಪ್ರಕರಣಗಳು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ ಪೊಲೀಸ್ ತಂಡವೊಂದು ಆತನನ್ನು ಬಂಧಿಸಲು ತೆರಳಿದಾಗ, ಕಿಲಾರಿ ಕಾನ್‌ಸ್ಟೆಬಲ್ ಷರೀಫ್ ದಫೇದಾರ್ ಅವರನ್ನು ಚಾಕುವಿನಿಂದ ಇರಿದು ಮತ್ತು ಪರಾರಿಯಾಗಲು ಯತ್ನಿಸಿದ್ದಾನೆ ಎಂದು ತಿಳಿಯಲಾಗಿದೆ.
ಪಿಎಸ್ಐ ಪ್ರವೀಣ್ ಗೊಂಗೊಳ್ಳಿ ಆರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೆ, ಆರೋಪಿ ಅದನ್ನು ನಿರ್ಲಕ್ಷಿಸಿ ಓಡುತ್ತಿದ್ದನು. ನಂತರ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ.
ಕಿಲಾರಿ ದೀರ್ಘ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದು, ಹಲವಾರು ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಕಾನ್‌ಸ್ಟೆಬಲ್ ಮತ್ತು ಆರೋಪಿ ಇಬ್ಬರನ್ನೂ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.