Home Crime ಪುನೀತ್ ಕೆರೆಹಳ್ಳಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ…!!

ಪುನೀತ್ ಕೆರೆಹಳ್ಳಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ…!!

ಕೋಲಾರ: ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಅವರಿಗೆ ಹೈಕೋರ್ಟ್‌ನಲ್ಲಿ ಮಧ್ಯಂತರ ಪರಿಹಾರ ಸಿಕ್ಕಿದೆ.

ಪುನೀತ್ ಕೆರೆಹಳ್ಳಿ ಹಾಗೂ ಗೋಪಿ ಗೌಡ ವಿರುದ್ಧದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ಮಾನ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠವು ಈ ಆದೇಶ ಮಾಡಿದೆ. ಅಲ್ಲದೆ, ಮಾಸ್ತಿ ಠಾಣೆ ಪೊಲೀಸರು ಹಾಗೂ ದೂರುದಾರ ಎಂ.ವಿ. ನಾಗರಾಜ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಮೇ 15 ರಂದು ಮಾಂಸದ ಅಂಗಡಿಯೊಂದರ ಬಳಿ ಪುನೀತ್ ಕೆರೆಹಳ್ಳಿ ಮತ್ತು ತಂಡದವರು ಇದ್ದಾಗ ಈ ಘಟನೆ ನಡೆದಿತ್ತು.

ದೂರುದಾರ ಎಂ.ವಿ. ನಾಗರಾಜ್ ಅವರ ದೂರಿನನ್ವಯ, ಪುನೀತ್ ಕೆರೆಹಳ್ಳಿ ಮತ್ತು ಗೋಪಿ ಗೌಡ ತಮ್ಮ ಜಾತಿಯ ಹೆಸರು ಹಿಡಿದು ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಹಲ್ಲೆ, ಗಲಭೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು. ಸದ್ಯ ಹೈಕೋರ್ಟ್ ಈ ಪ್ರಕ್ರಿಯೆಗಳಿಗೆ ತಡೆ ನೀಡುವ ಮೂಲಕ ಪುನೀತ್ ಕೆರೆಹಳ್ಳಿ ಅವರಿಗೆ ಕಾನೂನಾತ್ಮಕ ಸಮಾಧಾನ ನೀಡಿದೆ.