ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗದ ಚಾಲನೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ 6 ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮೆರಾಗಳು ಕಾರ್ಯಾಚರಣೆ ಆರಂಭಿಸಿವೆ.
ಹೆದ್ದಾರಿಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರನ್ನು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಿಂದಲೇ ನೇರವಾಗಿ ಮಾನಿಟರ್ ಮಾಡಲಾಗುವುದು. ಸದ್ಯಕ್ಕೆ 6 ಕಡೆ ಕ್ಯಾಮೆರಾ ಅಳವಡಿಸಲಾಗಿದ್ದು, ಹೊಸದಾಗಿ 14 ಕಡೆಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಟೆಂಡರ್ ಆಗಿದ್ದು, ಶ್ರೀದಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಹೈಟೆಕ್ ರಾಡಾರ್ ಕ್ಯಾಮೆರಾಗಳು ಕೇವಲ ಅತಿವೇಗವನ್ನು ಮಾತ್ರವಲ್ಲದೆ ದ್ವಿಚಕ್ರ ವಾಹನಗಳಲ್ಲಿ ತ್ರಿಪಲ್ ರೈಡಿಂಗ್ ಮಾಡುವುದು. ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸುವುದು, ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುವುದು, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ, ಒನ್-ವೇ ಅಥವಾ ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಮುಂತಾದ ಸಂಚಾರ ನಿಯಮ ಉಲ್ಲಂಘನೆಗಳನ್ನೂ ಪತ್ತೆಹಚ್ಚಲಿದೆ. ಕ್ಯಾಮೆರಾ ಮೂಲಕ ನಿಯಮ ಉಲ್ಲಂಘನೆ ಪತ್ತೆಯಾದ ನಂತರ ದಂಡದ ಚಲನ್ಗಳನ್ನು ಪೋಸ್ಟ್ ಮೂಲಕ ನೇರವಾಗಿ ಮನೆಗೆ ಕಳುಹಿಸಲಾಗುತ್ತದೆ. ಚಲನ್ ಸ್ವೀಕರಿಸಿದ 7 ದಿನಗಳ ಒಳಗಾಗಿ ಯಾವುದೇ ಪೊಲೀಸ್ ಠಾಣೆಯಲ್ಲಾದರೂ ದಂಡದ ಮೊತ್ತವನ್ನು ಪಾವತಿಸಬೇಕಾಗಿದೆ.




