ಉಪ್ಪಿನಂಗಡಿ: ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ನಡೆದಿದೆ.
ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯಿಂದ ಕೆಳಗೆ ಉರುಳಿ ನದಿ ಬದಿಯ ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ ಎಂದು ತಿಳಿದು ಬಂದಿದೆ.




