Home Karavali Karnataka ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ...

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ…!!

ಮಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ.

ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ (108/2025)ಕ್ಕೆ ಸಂಬಂಧಿಸಿ ಅವರು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಲು ಸರಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯವು ಸೆ.27ರ ತನಕ ಕಾಲಾವಕಾಶ ನೀಡಿತು.

ತಿಮರೋಡಿ ಅವರ ಉಜಿರೆಯಲ್ಲಿರುವ ಮನೆಗೆ ಎಸ್‌ಐಟಿ ದಾಳಿ ನಡೆಸಿದಾಗ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅವರು ನೀಡಿದ ದೂರಿನಂತೆ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ವಿಚಾರಣೆಗೆ ಹಾಜರಾಗಲು ಎರಡು ಬಾರಿ ಪೊಲೀಸರು ನೋಟಿಸ್‌ ನೀಡಿದ್ದರು. ಸೆ.25ರಂದು ಅವರು ವಿಚಾರಣೆಗೆ ಹಾಜರಾಗಬೇಕಿತ್ತು.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಮನವಿಯಂತೆ ಪುತ್ತೂರು ಎಸಿ ಅವರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18ರಂದು ಮಹೇಶ್‌ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಗಡಿಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.