Home Crime ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರ ಆರೋಪಿಗಳ  ಬಂಧನ

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರ ಆರೋಪಿಗಳ  ಬಂಧನ

ಮಂಗಳೂರು: ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಬೀಟ್ ಪೊಲೀಸ್ ಸಿಬ್ಬಂದಿ ಮೇಲೆ ಸಿಮೆಂಟ್ ಶೀಟ್‌ನಿಂದ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಅರಸಿನಮಕ್ಕಿ ನಿವಾಸಿ ಸಚಿನ್ ಕೆ.ಆರ್. (24) ಮತ್ತು ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಚಂದನ್ (24) ಬಂಧಿತ ಆರೋಪಿಗಳು. ಇವರಿಬ್ಬರೂ ಸದ್ಯ ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದಲ್ಲಿ ಬಾಡಿಗೆ ಕೋಣೆಯಲ್ಲಿದ್ದರು. ಸಚಿನ್ ಕುಂಟಿಕಾನದ ಸ್ವೀಟ್ಸ್ ಫ್ಯಾಕ್ಟರಿಯೊಂದರಲ್ಲಿ ಚಾಲಕನಾಗಿದ್ದರೆ, ಚಂದನ್ ಕೂಳೂರಿನ ಕಾರು ಶೋರೂಂ ಒಂದರಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 24ರಂದು ಮುಂಜಾನೆ 2:10ರ ಸುಮಾರಿಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನದ ರಸ್ತೆಯಲ್ಲಿ ಪೊಲೀಸ್ ಸಿಬ್ಬಂದಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದರು. ಈ ವೇಳೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದ ಆರೋಪಿಗಳು ಮಧ್ಯರಾತ್ರಿಯಾದರೂ ನಗರದಲ್ಲಿ ಸುತ್ತಾಡುತ್ತಿದ್ದರು. ಇದನ್ನು ಗಮನಿಸಿದ ಬೀಟ್ ಪೊಲೀಸರು ಸ್ಕೂಟರ್ ತಡೆದು ತಡರಾತ್ರಿ ಓಡಾಡುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ಪೊಲೀಸರು ವಿಚಾರಣೆ ನಡೆಸಿದ್ದಕ್ಕೆ ತೀವ್ರ ಆಕ್ರೋಶಗೊಂಡ ಆರೋಪಿಗಳು, ಏಕಾಏಕಿ ಗಲಾಟೆ ಆರಂಭಿಸಿದ್ದಾರೆ. ಈ ವೇಳೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿ, ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಶೀಟ್‌ನ ತುಂಡನ್ನು ತೆಗೆದುಕೊಂಡು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಬಲವಾಗಿ ಜಜ್ಜಿದ್ದಾನೆ. ಹಲ್ಲೆಯ ತೀವ್ರತೆಗೆ ಪೊಲೀಸ್ ಸಿಬ್ಬಂದಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಕ್ಷಣವೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿ.ಎನ್.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್, ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರ ವಿಶೇಷ ತಂಡವನ್ನು ರಚಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ತಾಂತ್ರಿಕ ಹಾಗೂ ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ, ಆರೋಪಿಗಳು ಕೇರಳ ರಾಜ್ಯದ ಕಾಂಞಿಗಾಡ್‌ ಪ್ರದೇಶದಲ್ಲಿ ಅಡಗಿ ಕುಳಿತಿರುವುದನ್ನು ಪತ್ತೆಹಚ್ಚಿದ್ದಾರೆ. ತಕ್ಷಣ ಅಲ್ಲಿಗೆ ಧಾವಿಸಿದ ಪೊಲೀಸರು ಮೇ 26ರಂದು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಠಾಣಾ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಎಲೆಕ್ಟ್ರಿಕ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.