ಚಿತ್ರದುರ್ಗ, ಮೇ 29: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ವಾಹನ ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ನಡೆದಿದೆ.
ಮೃತರನ್ನು ಚಳ್ಳಕೆರೆ ಮೂಲದ ಛಾಯಾಗ್ರಾಹಕರಾದ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ ಹಾಗೂ ಪ್ರಮೋದ್ ಎಂದು ಗುರುತಿಸಲಾಗಿದೆ. ಇವರು ಬಳ್ಳಾರಿಯಿಂದ ಚಳ್ಳಕೆರೆಗೆ ಕಾರಿನಲ್ಲಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿಯಾಗಿದ್ದ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ತೆರಳಿದ್ದು, ಹಿಂದಿರುಗುವ ಸಂದರ್ಭದಲ್ಲಿ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಈ ವೇಳೆ ಕಾರಿನ ಟೈಯರ್ ಏಕಾಏಕಿ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಬದಿ ನಿಂತಿದ್ದ ಲಾರಿಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.




