ಕಾರ್ಕಳ: ದೀರ್ಘಕಾಲದ ಮದ್ಯ ವ್ಯಸನ ಹಾಗೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮೃತರನ್ನು ಯತೀಶ್ ಆಚಾರ್ಯ (41) ಎಂದು ಗುರುತಿಸಲಾಗಿದೆ. ಅವರು ಕಳೆದ ಆರು ವರ್ಷಗಳಿಂದ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದು, ಸುಮಾರು ಹತ್ತು ವರ್ಷಗಳ ಹಿಂದೆ ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯರು ಮದ್ಯಪಾನ ಮಾಡದಂತೆ ಸಲಹೆ ನೀಡಿದ್ದರೂ ಅವರು ಮದ್ಯ ಸೇವನೆಯನ್ನು ಮುಂದುವರಿಸಿದ್ದರು ಎಂದು ತಿಳಿದುಬಂದಿದೆ.
ಮೇ 28ರಂದು ಸಂಜೆ ಅವರ ಪುತ್ರ ಆಕಾಶ ಮನೆಗೆ ಬಂದಾಗ ತಂದೆ ಮನೆಯ ಮಾಡಿನ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಅವರನ್ನು ಕೆಳಗಿಳಿಸಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




