ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ.
ಅಂತೆಯೇ ಈ ದುರ್ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಉಮಾದೇವಿ (55), ವಿಜಯಾ (40), ಲಕ್ಷ್ಮಮ್ಮ (50), ಸರೋಜಮ್ಮ ಹಾಗೂ ಆಟೋ ಚಾಲಕ ಆಂಜಿನಪ್ಪ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಾಗೇಪಳ್ಳಿ ಪಟ್ಟಣದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಅಂತೆಯೇ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.




