ಬೆಂಗಳೂರು : ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜೊತೆಗೆ, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಗಾಳಿಯ ವೇಗವೂ ತೀವ್ರವಾಗಿರಲಿದೆ ಎಂದು ಇಲಾಖೆ ತಿಳಿಸಿದೆ.
ಅಂತೆಯೇ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಸೂಚಿಸಿದೆ.
ಇನ್ನು, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬರಲಿದೆ. ಈ ಜಿಲ್ಲೆಗಳಲ್ಲಿ ಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರದಲ್ಲಿ ಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಮೀನುಗಾರರು ಮುಂದಿನ ಆದೇಶದವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮಳೆ ಬೀಳುವ ಸಮಯದಲ್ಲಿ ಬಲವಾದ ಗಾಳಿ ಮತ್ತು ಮಿಂಚು ಇರಲಿದ್ದು, ಸಾರ್ವಜನಿಕರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಇಲಾಖೆ ಸೂಚಿಸಿದೆ.
ಮುಂಗಾರು ಪೂರ್ವ ಮಳೆಯ ನೀರನ್ನು ಬಳಸಿಕೊಂಡು ರೈತರು ತಕ್ಷಣವೇ ಬಿತ್ತನೆಗೆ ಭೂಮಿಯನ್ನು ಹದಗೊಳಿಸಿಕೊಳ್ಳಲು ಸೂಕ್ತ ಸಮಯವಾಗಿದೆ. ಬಿತ್ತನೆ ಕಾರ್ಯಕ್ಕೆ ಅಗತ್ಯವಿರುವ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳುವುದು ಉತ್ತಮ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.




