ಸಾಗರ: ಕರ್ನಾಟಕ ಸರ್ಕಾರದ ವರ್ಗಾವಣೆ ಆದೇಶದಂತೆ ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಪ್ರತಿಭಾ ಆರ್ ಅವರು ಮೇ 30ರಂದು ಸಾಗರ ತಾಲೂಕು ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಜನಪರ ಆಡಳಿತ, ಸಾಮಾಜಿಕ ಕಳಕಳಿ ಹಾಗೂ ಶೈಕ್ಷಣಿಕ ಸಾಧನೆಗಳ ಮೂಲಕ ಗುರುತಿಸಿಕೊಂಡಿರುವ ಡಾ. ಪ್ರತಿಭಾ ಆರ್ ಅವರು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದಿರುವ ಅವರು ವಿವಿಧ ಉನ್ನತ ವಿದ್ಯಾರ್ಹತೆಗಳನ್ನು ಹೊಂದಿದ್ದು, ಶಿಕ್ಷಣ ಇಲಾಖೆಯಲ್ಲಿ ವಿಷಯ ಪರಿವೀಕ್ಷಕ ಹಾಗೂ ಡಯೆಟ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.
ಬಳಿಕ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಡಳಿತ ಸೇವೆಗೆ ಸೇರ್ಪಡೆಗೊಂಡ ಅವರು ಮಾಗಡಿ, ಕಾಪು ಹಾಗೂ ಕಾರ್ಕಳ ಸೇರಿದಂತೆ ಹಲವು ತಾಲೂಕುಗಳಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ದಕ್ಷ ಅಧಿಕಾರಿ ಎಂಬ ಹೆಗ್ಗಳಿಕೆಯನ್ನು ಅವರು ಪಡೆದಿದ್ದಾರೆ.




