ಭಟ್ಕಳ: ಸ್ಕೂಟರ್‌ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಡ್ ಭಟ್ಕಳದಲ್ಲಿ ನಡೆದಿದೆ.
ಪುರುವರ್ಗ ನಿವಾಸಿ ಸುಂದರ್ ಆಚಾರಿ (50) ಮೃತಪಟ್ಟ ಸ್ಕೂಟರ್ ಸವಾರ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಒಬ್ಬ ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಸುಂದರ್ ಆಚಾರಿ ಅವರು ಪುರುವರ್ಗದಿಂದ ಭಟ್ಕಳದ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಮಣಿಪಾಲದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸರಕಾರಿ ಬಸ್ ಹಿಂದಿನಿಂದ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದರು. ದುರದೃಷ್ಟವಶಾತ್, ಅವರು ಬೀಳುತ್ತಿದ್ದಂತೆ, ಬಸ್ ಚಕ್ರ ಅವರ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಭಟ್ಕಳ ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ದಿವಾಕರ್ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡರು. ಈ ಕುರಿತು ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.