ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮಗೆ ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ (ಬಿಬಿಎಂಪಿ) ಖಾತೆ ದೊರೆಯದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿದ್ದು, ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಂದೆಯೂ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವ ಭರವಸೆ ದೊರೆತಿತ್ತು ಎನ್ನಲಾಗಿದ್ದು, ಈ ಬಾರಿ ಕೂಡ ಆ ಖಾತೆಯ ನಿರೀಕ್ಷೆಯಲ್ಲಿದ್ದ ರಾಮಲಿಂಗಾರೆಡ್ಡಿ ಅವರಿಗೆ ಅದು ಸಿಗದಿರುವುದು ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಆದರೆ ಈ ಬೆಳವಣಿಗೆ ಕುರಿತು ರಾಮಲಿಂಗಾರೆಡ್ಡಿ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಸರ್ಕಾರ ರಚನೆಯಾದ ಕೆಲವೇ ಗಂಟೆಗಳಲ್ಲಿ ಉಂಟಾದ ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.




