ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ವಿಜಯ್ ಅವರಿಗೆ ಝಡ್ ಪ್ಲಸ್ ಭದ್ರತೆ ಇರುವುದರಿಂದ ದೇವಸ್ಥಾನ ಆವರಣ, ಪ್ರವೇಶ ದ್ವಾರಗಳು ಹಾಗೂ ಅವರು ಸಂಚರಿಸುವ ಮಾರ್ಗಗಳಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ.
ತಮಿಳುನಾಡು ಪೊಲೀಸ್ ಇಲಾಖೆಯ ಡಿಐಜಿ, ಎಸ್‌ಪಿ ಸೇರಿದಂತೆ ಸುಮಾರು 40 ಮಂದಿ ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿ ಅವರ ಭದ್ರತಾ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಭದ್ರತಾ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ.
ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಖ್ಯಮಂತ್ರಿ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.





