ಮಣಿಪಾಲ : ಶಾಲಾ ಬಸ್ ಚಲಿಸುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ.
ಪರಿಸ್ಥಿತಿಯನ್ನು ಅರಿತ ಚಾಲಕ ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ.
ಅದೃಷ್ಟವಶಾತ್ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಚಾಲಕನ ಸಮಯೋಚಿತ ಕ್ರಮದಿಂದ ದೊಡ್ಡ ದುರಂತವೊಂದು ತಪ್ಪಿದೆ. ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.




